ಬೆಂಗಳೂರು: ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ ಗೌರಿಶಂಕರ್ ಆಯ್ಕೆಯನ್ನು ಅನೂರ್ಜಿತಗೊಳಿಸಿ ಹೈಕೋರ್ಟ್ ಆದೇಶಿಸಿದೆ.
ಚುನಾವಣಾ ಅಕ್ರಮ ಎಸಗಿರುವ ಶಾಸಕ ಗೌರಿಶಂಕರ್ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಬಿ ಸುರೇಶ್ ಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾ. ಎಸ್ ಸುನಿಲ್ ದತ್ ಯಾದವ್ ಅವರಿದ್ಧ ಪೀಠ ಇಂದು ಕಲಬುರಗಿ ಪೀಠದಲ್ಲಿ ಪ್ರಕಟಿಸಿದೆ.
ಪೀಠ ತನ್ನ ತೀರ್ಪಿನಲ್ಲಿ, ಶಾಸಕ ಗೌರಿಶಂಕರ್ ಆಯ್ಕೆಯನ್ನು ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 101 (ಡಿ) ಅಡಿಯಲ್ಲಿ ಅನೂರ್ಜಿತಗೊಳಿಸಲಾಗಿದೆ ಎಂದು ತಿಳಿಸಿದೆ. ಇದೇ ವೇಳೆ ಗೌರಿಶಂಕರ್ ಪರ ವಕೀಲರ ಕೋರಿಕೆ ಮೇರೆಗೆ ಆದೇಶವನ್ನು ಒಂದು ತಿಂಗಳ ಕಾಲ ಅಮಾನತಿನಲ್ಲಿಟ್ಟಿದೆ.
ಹೈಕೋರ್ಟ್ ತೀರ್ಪು ಪ್ರಕಟಿಸುತ್ತಿದ್ದಂತೆ ಗೌರಿಶಂಕರ್ ಪರ ವಕೀಲರಾದ ಹೇಮಂತ್ ರಾಜ್ ಅವರು ಪೀಠಕ್ಕೆ ಮನವಿ ಮಾಡಿ, ಕರ್ನಾಟಕ ವಿಧಾನಸಭೆ ಚುನಾವಣೆ ಘೋಷಣೆ ಆಗಿರುವುದರಿಂದ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಅಲ್ಲದೇ, ಈ ಸಂಬಂಧ ಮಧ್ಯಂತರ ಅರ್ಜಿಯನ್ನು ಸಲ್ಲಿಸಿ ಪ್ರಜಾಪ್ರಭುತ್ವ ಕಾಯ್ದೆಯ ಸೆಕ್ಷನ್ 116 (ಬಿ) ಅಡಿ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ಗೆ ಅಧಿಕಾರವಿದೆ ಎಂದು ವಿವರಿಸಿದರು. ಮನವಿ ಪರಿಣಿಸಿದ ಹೈಕೋರ್ಟ್ ತನ್ನ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿದೆ.
2018ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೌರಿಶಂಕರ್ ಗೆಲುವು ಸಾಧಿಸಿದ್ದರು. ಆ ಬಳಿಕ ಹೈಕೋರ್ಟ್ ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದ ಪರಾಜಿತ ಅಭ್ಯರ್ಥಿ ಬಿ. ಸುರೇಶ್ ಗೌಡ ಅವರು ಗೌರಿಶಂಕರ್ ಆಯ್ಕೆಯು ಅಕ್ರಮದಿಂದ ಕೂಡಿದೆ. ಹೀಗಾಗಿ ಅವರ ಆಯ್ಕೆಯನ್ನು ಅನೂರ್ಜಿತಗೊಳಿಸಬೇಕು ಎಂದು ಕೋರಿದ್ದರು.
ಅಲ್ಲದೇ, ಶಾಸಕರಾಗಿ ಆಯ್ಕೆಯಾಗಿರುವ ಗೌರಿಶಂಕರ್ ಮತದಾರರಿಗೆ ನಕಲಿ ವಿಮಾ ಪಾಲಿಸಿಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 99(1) (ಎ) ಅಡಿ ಆರೋಪಿತರು ಚುನಾವಣಾ ಭ್ರಷ್ಟಾಚಾರದಲ್ಲಿ ತೊಡಗಿರುವುದು ಕಂಡು ಬಂದಿದೆ ಎಂದು ಆದೇಶದಲ್ಲಿ ಹೇಳಿದೆ.
ಚುನಾವಣಾ ಅಕ್ರಮ ಆರೋಪದಡಿ ಶಾಸಕ ಸ್ಥಾನ ಕಳೆದು ಕೊಂಡವರು 6 ವರ್ಷ ಕಾಲ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂಬ ನಿಯಮವಿದೆ. ಹೀಗಾಗಿ, ಗೌರಿಶಂಕರ್ ಅವರು ಹಾಲಿ ವಿಧಾನಸಭಾ ಚುನಾವಣೆ ಸೇರಿದಂತೆ ಮುಂದಿನ ಆರು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗದ ಭೀತಿಗೆ ಸಿಲುಕಿದ್ದಾರೆ.