News

ಕೋರ್ಟ್ ಪಿಸಿಆರ್ ವಿಚಾರಣೆಗೆ ಸ್ವೀಕರಿಸಿದಾಗ ಪೊಲೀಸರು ತನಿಖೆ ನಿರಾಕರಿಸುವಂತಿಲ್ಲ: ಹೈಕೋರ್ಟ್

Share It

ಮ್ಯಾಜಿಸ್ಟ್ರೇಟ್ ಖಾಸಗಿ ದೂರನ್ನು ವಿಚಾರಣೆಗೆ ಸ್ವೀಕರಿಸಿ ತನಿಖೆ ನಡೆಸಲು ಆದೇಶಿಸಿದ ನಂತರ ಪೊಲೀಸರು ಯಾವುದೇ ಕಾರಣಕ್ಕೂ ತನಿಖೆ ನಿರಾಕರಿಸಲು ಅವಕಾಶವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಮ್ಯಾಜಿಸ್ಟ್ರೇಟ್ ಆದೇಶದ ಹೊರತಾಗಿಯೂ ತನಿಖೆಗೆ ನಿರಾಕರಿಸಿದ್ದ ಪೊಲೀಸರ ಕ್ರಮ ಪ್ರಶ್ನಿಸಿ ಬೆಂಗಳೂರಿನ ಅಶ್ವಿನಿ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಪೀಠ ತನ್ನ ತೀರ್ಪಿನಲ್ಲಿ, ಸಿಆರ್‌ಪಿಸಿ ಸೆಕ್ಷನ್ 200ರ ಅಡಿಯಲ್ಲಿ ಮ್ಯಾಜಿಸ್ಟ್ರೇಟ್ ದೂರನ್ನು ಪರಿಗಣಿಸಿ ತನಿಖೆಗೆ ಆದೇಶಿಸಿದ ನಂತರ ಪೊಲೀಸರು ಸಿಆರ್‌ಪಿಸಿ ಸೆಕ್ಷನ್ 173ಕ್ಕೆ ವಿರುದ್ಧವಾಗಿ ನಡೆದುಕೊಳ್ಳಲು ಅಥವಾ ಕೋರ್ಟ್ ಆದೇಶವನ್ನು ಉಲ್ಲಂಘಿಸಲು ಸಾಧ್ಯವಿಲ್ಲ. ಹೀಗಾಗಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಬೇಕು ಎಂದು ಆದೇಶಿಸಿದೆ. ಹಾಗೆಯೇ, ತನಿಖೆ ನಡೆಸಲು ನಿರಾಕರಿಸಿ ಜ್ಞಾನಭಾರತಿ ಠಾಣೆ ಪೊಲೀಸರು ಅರ್ಜಿದಾರರಿಗೆ ನೀಡಿದ್ದ ಹಿಂಬರಹವನ್ನು ರದ್ದುಗೊಳಿಸಿದೆ.

ಪ್ರಕರಣದ ಹಿನ್ನೆಲೆ: ಅರ್ಜಿದಾರರಾದ ಅಶ್ವಿನಿ ಕೆಲ ಖಾಸಗಿ ವ್ಯಕ್ತಿಗಳ ವಿರುದ್ಧ ತನಿಖೆ ಕೋರಿ ಸಿಆರ್‌ಪಿಸಿ ಸೆಕ್ಷನ್ 200ರ ಅಡಿಯಲ್ಲಿ ನಗರದ 9ನೇ ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ಪಿಸಿಆರ್ ದಾಖಲಿಸಿದ್ದರು. ದೂರಿನ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್‌, ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಜ್ಞಾನಭಾರತಿ ಠಾಣೆ ಪೊಲೀಸರಿಗೆ ನಿರ್ದೇಶಿಸಿದ್ದರು. ಈ ಆದೇಶದ ಪ್ರತಿಯನ್ನು ಅರ್ಜಿದಾರರು ಪೊಲೀಸರಿಗೆ ತಲುಪಿಸಿದಾಗ ಪ್ರಕರಣ ನಮ್ಮ ಠಾಣೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಪೊಲೀಸರು ತನಿಖೆ ನಡೆಸಲು ನಿರಾಕರಿಸಿದ್ದರು. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್‌ ಮೆಟ್ಟಿಲೇರಿದ್ದರು.


Share It

You cannot copy content of this page