News

ಹೆಚ್‌.ಡಿ ಕುಮಾರಸ್ವಾಮಿ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್

Share It

ಬೆಂಗಳೂರು: ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಎಡಿಜಿಪಿ ಚಂದ್ರಶೇಖರ್ ದಾಖಲಿಸಿರುವ ಕ್ರಿಮಿನಲ್ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಆದೇಶಿಸಿದೆ.

ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಹೆಚ್.ಡಿ ಕುಮಾರಸ್ವಾಮಿ ಹಾಗೂ ಸುರೇಶ್‌ ಬಾಬು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ. ಅಲ್ಲದೆ, ಎಫ್‌ಐಆರ್ ಆಧರಿಸಿ ಹಳೆಯ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತಿಲ್ಲ ಎಂದು ನಿರ್ದೇಶಿಸಿದೆ.

ಪ್ರಕರಣದ ಹಿನ್ನೆಲೆ: ನಿಯಮ ಉಲ್ಲಂಘಿಸಿ ಸಾಯಿ ಮಿನರಲ್ಸ್ ಕಂಪನಿಗೆ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪದ ಮೇಲೆ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಲೋಕಾಯುಕ್ತ ಎಸ್‌ಐಟಿ ಎಡಿಜಿಪಿ ಚಂದ್ರಶೇಖರ್ ರಾಜ್ಯಪಾಲರಿಗೆ ಪತ್ರ ಬರೆದಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಹೆಚ್‌ಡಿಕೆ, ಚಂದ್ರಶೇಖರ್ ವಿರುದ್ಧ ಪತ್ರಿಕಾಗೋಷ್ಠಿಯಲ್ಲಿ ಹರಿಹಾಯ್ದಿದ್ದರು. ಬಳಿಕ ಎಡಿಜಿಪಿ ಚಂದ್ರಶೇಖರ್ ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆರೋಪಿಗಳು ದುರುದ್ದೇಶಪೂರಿತವಾಗಿ ಆರೋಪ ಮಾಡಿದ್ದಾರೆ. ಮತ್ತು ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿದ್ದಾರೆಂದು ಚಂದ್ರಶೇಖರ್ ದೂರಿನಲ್ಲಿ ಆರೋಪಿಸಿದ್ದರು.

ಪೊಲೀಸರು ಎನ್.ಸಿ.ಆರ್ ದಾಖಲಿಸಿದ್ದರಿಂದ ಚಂದ್ರಶೇಖರ್ ಖಾಸಗಿ ದೂರು ದಾಖಲಿಸಿದ್ದರು. ದೂರಿನ ವಿಚಾರಣೆ ನಡೆಸಿದ 42ನೇ ಎಸಿಎಂಎಂ ನ್ಯಾಯಾಲಯ ದೂರು ದಾಖಲಿಸಲು ಪೊಲೀಸರಿಗೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಹೆಚ್.ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಮತ್ತು ಜೆಡಿಎಸ್ ಮುಖಂಡ ಸುರೇಶ್‌ಬಾಬು ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.


Share It

You cannot copy content of this page