News

ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ: ಸಿಟಿ ರವಿಗೆ ಹೈಕೋರ್ಟ್ ರಿಲೀಫ್

Share It

ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಎದುರಿಸುತ್ತಿರುವ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಜನವರಿ 30ರ ವರೆಗೆ ಸಿಟಿ ರವಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ.

ಪ್ರಕರಣದ ವಿಚಾರಣೆ ವೇಳೆ ಸಿಟಿ ರವಿ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿವಿ ನಾಗೇಶ್ ಅವರು, ಶಾಸಕರ ನಡುವೆ ಸದನದಲ್ಲಿ ನಡೆದ ವಿಚಾರಕ್ಕೆ ವಿನಾಯಿತಿ ಇದೆ ಎಂದು ವಿವರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಸರ್ಕಾರಿ ಅಭಿಯೋಜಕರಾದ ಬಿ.ಎ ಬೆಳ್ಳಿಯಪ್ಪ ಅವರು ಕ್ರಿಮಿನಲ್ ಕೃತ್ಯಗಳಿಗೆ ಅಂತಹ ವಿನಾಯಿತಿ ನೀಡಲಾಗದು ಎಂದು ವಾದಿಸಿದರು.

ಕೆಲಕಾಲ ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ವ್ಯಾಪ್ತಿಯನ್ನು ನಾವು ತೀರ್ಮಾನಿಸಬೇಕಿದೆ. ಹೀಗಾಗಿ ಸದ್ಯಕ್ಕೆ ಆರೋಪಿತರ ವಿರುದ್ಧ ಯಾವುದೇ ಬಲವಂತದ ಕ್ರಮ ಬೇಡವೆಂದು ನಿರ್ದೇಶಿಸಿತು. ಇನ್ನು ಸಿಟಿ ರವಿ ವಾಯ್ಸ್ ಸ್ಯಾಂಪಲ್ ತೆಗೆದುಕೊಳ್ಳಬೇಕಿದೆ ಎಂಬ ಎಸ್ಪಿಪಿ ವಾದಕ್ಕೆ ಪ್ರತಿಕ್ರಿಯಿಸಿದ ಪೀಠ, ಸದ್ಯ ನಮ್ಮ ಮುಂದಿರುವ ತನಿಖಾ ವ್ಯಾಪ್ತಿಯ ಪ್ರಶ್ನೆ ತೀರ್ಮಾನಿಸುವವರೆಗೆ ಕಾಯುವಂತೆ ಸೂಚಿಸಿತು.

ಪ್ರಕರಣದ ಹಿನ್ನೆಲೆ: ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ವಿಧಾನ ಪರಿಷತ್ತಿನಲ್ಲಿ ಸಿಟಿ ರವಿ ತಮ್ಮನ್ನು ಅಶ್ಲೀಲವಾಗಿ ನಿಂದಿಸಿದ್ದರೆಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆರೋಪಿಸಿದ್ದಾರೆ. ಈ ಆರೋಪವನ್ನು ಸಿಟಿ ರವಿ ಅಲ್ಲಗಳೆದಿದ್ದಾರೆ. ಮತ್ತೊಂದೆಡೆ, ಅಶ್ಲೀಲವಾಗಿ ನಿಂದಿಸಿರುವುದು ಮೇಲ್ನೋಟಕ್ಕೆ ದೃಢಪಟ್ಟ ಹಿನ್ನೆಲೆಯಲ್ಲಿ ಅದು ಸಿಟಿ ರವಿ ಅವರ ಧ್ವನಿಯೇ ಎಂಬುದನ್ನು ಖಚಿತಪಡಿಸಲು ಅವರ ವಾಯ್ಸ್ ಸ್ಯಾಂಪಲ್ ಕೋರಲಾಗಿತ್ತು. ವಾಯ್ಸ್ ಸ್ಯಾಂಪಲ್ ನೀಡಲು ಅವರು ನಿರಾಕರಿಸಿದ್ದರು. ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ.


Share It

You cannot copy content of this page