ಬೆಂಗಳೂರು: ಆರೋಪಿತರು ನಿರೀಕ್ಷಣಾ ಜಾಮೀನು ಕೋರಿ ಅಸಾಧಾರಣ ಸಂದರ್ಭಗಳಲ್ಲಿ ಮಾತ್ರ ನೇರವಾಗಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಬಹುದೇ ಹೊರತು ಎಲ್ಲ ಸಂದರ್ಭಗಳಲ್ಲಿ ಅಲ್ಲ. ಹೀಗಾಗಿ ಜಾಮೀನು ಅರ್ಜಿಯನ್ನು ಮೊದಲಿಗೆ ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸುವುದು ಸೂಕ್ತ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಶಾಲಾ ಶಿಕ್ಷಕ ಎಚ್.ಇಮ್ರಾನ್ ಎಂಬವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ಏಕಸದಸ್ಯ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಹೈಕೋರ್ಟ್ ತನ್ನ ತೀರ್ಪಿನಲ್ಲಿ, ಜಾಮೀನು ಅರ್ಜಿಯನ್ನು ಪರಿಗಣಿಸುವಲ್ಲಿ ಮತ್ತು ನಿರ್ಧರಿಸುವಲ್ಲಿ ಸೆಷನ್ಸ್ ನ್ಯಾಯಾಲಯ ಮತ್ತು ಹೈಕೋರ್ಟ್ ವ್ಯಾಪ್ತಿ ಒಂದೇ ಆಗಿದ್ದರೂ, ಅರ್ಜಿದಾರರು ಅಸಾಧಾರಣ ಸಂದರ್ಭಗಳಿದ್ದಲ್ಲಿ ಮಾತ್ರ ನೇರವಾಗಿ ಹೈಕೋರ್ಟ್‌ಗೆ ಸಲ್ಲಿಸಬಹುದು. ಇಲ್ಲದಿದ್ದರೆ ಪ್ರಾರಂಭದಲ್ಲಿ ಮೊದಲಿಗೆ ಸೆಷನ್ಸ್ ನ್ಯಾಯಾಲಯವನ್ನು ಸಂಪರ್ಕಿಸಬೇಕು ಎಂದಿದೆ.
ಅಲ್ಲದೆ, ಒಂದು ವೇಳೆ ಸೆಷನ್ಸ್ ನ್ಯಾಯಾಲಯವು ಪ್ರತಿಕೂಲ ಆದೇಶ ಹೊರಡಿಸಿದರೆ, ಆಗ ಅರ್ಜಿದಾರರು ಜಾಮೀನು ಕೋರಿ ಹೈಕೋರ್ಟ್ ಮುಂದೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಪ್ರಕರಣದಲ್ಲಿ ತಕ್ಷಣವೇ ಅರ್ಜಿಯನ್ನು ಪರಿಗಣಿಸಲು ಯಾವುದೇ ಸೂಕ್ತ ಕಾರಣಗಳಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.
ಪ್ರಕರಣದ ಹಿನ್ನೆಲೆ: ಅರ್ಜಿದಾರ ಶಿಕ್ಷಕ ಇಮ್ರಾನ್ ಮದುವೆಯ ಭರವಸೆ ನೀಡಿ ತನ್ನೊಂದಿಗೆ ಲೈಂಗಿಕ ಸಂಬಂಧ ಬೆಳೆಸಿ, ಇದೀಗ ಮೋಸ ಮಾಡಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಬಂಧನ ಭೀತಿಗೆ ಒಳಗಾಗಿದ್ದ ಅರ್ಜಿದಾರ ನಿರೀಕ್ಷಣಾ ಜಾಮೀನು ಕೋರಿ ನೇರವಾಗಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಅರ್ಜಿದಾರ ಶಿಕ್ಷಕರ ವಿರುದ್ಧ ಸುಳ್ಳು ದೂರು ದಾಖಲಿಸಲಾಗಿದೆ ಹಾಗು ಅರ್ಜಿದಾರರಿಗೆ ಬೆದರಿಕೆ ಇದೆ. ಜಾಮೀನು ಮತ್ತು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲು ಸೆಷನ್ಸ್ ನ್ಯಾಯಾಲಯ ಮತ್ತು ಹೈಕೋರ್ಟ್ ಎರಡೂ ಸಮಾನ ಅಧಿಕಾರ ವ್ಯಾಪ್ತಿ ಹೊಂದಿವೆ. ಆದ್ದರಿಂದ, ಅರ್ಜಿದಾರರು ನೇರವಾಗಿ ಈ ನ್ಯಾಯಾಲಯವನ್ನು ಸಂಪರ್ಕಿಸಿದ್ದು ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದರು.