ಬೆಂಗಳೂರು: ಜವಾಹರ್‌ಲಾಲ್ ನೆಹರು ತಾರಾಲಯದ ಆವರಣದಲ್ಲಿ ರಾಜ್ಯ ಮಟ್ಟದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿಜ್ಞಾನ ದಿನದ ಪ್ರತಿಜ್ಞಾ ವಿಧಿಯನ್ನು ಭೋಧಿಸಲಿದ್ದಾರೆ. ಅಲ್ಲದೇ ಇದೇ ಸಮಯದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಯುಆರ್ ರಾವ್ ಭವನ ಲೋಕಾರ್ಪಣೆಗೊಳ್ಳಲಿದೆ.
ಈ ಕಾರ್ಯಕ್ರಮದಲ್ಲಿ ಸುಮಾರು 1000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಈ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಳಿಗ್ಗೆ 11 ಗಂಟೆಗೆ ವೈಜ್ಞಾನಿಕ ಮನೋಭಾವನೆ ಮತ್ತು ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವ ಪ್ರತಿಜ್ಞಾ ವಿಧಿಯನ್ನು ಭೋಧಿಸಲಿದ್ದಾರೆ.
ಇದೇ ವೇಳೆ, ರಾಜ್ಯದ ಎಲ್ಲಾ ಶಾಲಾ – ಕಾಲೇಜುಗಳಲ್ಲೂ ವಿದ್ಯಾರ್ಥಿಗಳಿಗೆ ಹಾಗೂ ಸರಕಾರಿ ಕಚೇರಿಗಳಲ್ಲಿ ಏಕಕಾಲಕ್ಕೆ ಈ ಪ್ರತಿಜ್ಞಾ ವಿಧಿಯನ್ನು ಭೋಧಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಸುತ್ತೋಲೆಯನ್ನು ಹೊರಡಿಸಲಾಗಿದೆ. ನೆಹರು ತರಾಲಯದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭಾಧ್ಯಕ್ಷ ಯು.ಟಿ ಖಾದರ್, ಸಚಿವ ಮಧು ಬಂಗಾರಪ್ಪ ಮತ್ತು ಎಂಸಿ ಸುಧಾಕರ್ ಸೇರಿದಂತೆ ಹಲವರು ಉಪಸ್ಥಿತರಿರಲಿದ್ದಾರೆ.