ಬೆಂಗಳೂರು: ನೆರೆ ರಾಜ್ಯಗಳಾದ ಆಂಧ್ರ ಪ್ರದೇಶ ಹಾಗೂ ಮಹಾರಾಷ್ಟ್ರಗಳಲ್ಲಿ ಹಕ್ಕಿ ಜ್ವರ ಪ್ರಕರಣಗಳು ಕಂಡು ಬಂದಿದ್ದು. ರಾಜ್ಯದಲ್ಲಿಯೂ ಕೆಲವು ಸ್ಥಳಗಳಲ್ಲಿ ಪ್ರಕರಣಗಳು ವರದಿಯಾಗಿವೆ. ಈ ಹಿನ್ನಲೆಯಲ್ಲಿ ನಗರ ಜಿಲ್ಲಾಡಳಿತ ಜಿಲ್ಲೆಯಾದ್ಯಂತ ತೀವ್ರ ಮುಂಜಾಗ್ರತೆ ವಹಿಸಿದ್ದು, ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗದೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಿದೆ.
ಯಾವುದೇ ಪಕ್ಷಿಗಳು ಅಥವಾ ಕೋಳಿಗಳ ಅನುಮಾನಾಸ್ಪದ, ಅಸಹಜ ಇಲ್ಲವೇ ಹಠಾತ್ ಸಾವುಗಳು ಕಂಡುಬಂದಲ್ಲಿ ಹತ್ತಿರದ ಪಶು ಇಲಾಖೆಗೆ ಮಾಹಿತಿ ನೀಡಬೇಕು. ಹಕ್ಕಿ ಜ್ವರ ಕಂಡು ಬಂದ ಸ್ಥಳದಿಂದ 10 ಕೀ.ಮಿ ಸುತ್ತಲಿನ ಗ್ರಾಮಗಳಲ್ಲಿ ಶೀತ ಅಥವಾ ಕೆಮ್ಮು ಮಾದರಿಯ ಪ್ರಕರಣಗಳು, ಜ್ವರ ಪ್ರಕರಣಗಳು, ತಲೆನೋವು, ಸ್ನಾಯುಗಳ ನೋವು, ಗಂಟಲು ನೋವು ಇತರ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ತಪ್ಪದೇ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಕೂಡಲೇ ಮಾಹಿತಿ ನೀಡಿ ಚಿಕಿತ್ಸೆ ಪಡೆಯಬೇಕು ಬಹು ಮುಖ್ಯವಾಗಿ ಸಾರ್ವಜನಿಕರು ಭಯಭೀತರಾಗದೆ ಎಚ್ಚರದಿಂದ ಕೋಳಿ ಮಾಂಸ ಮತ್ತು ಮೊಟ್ಟೆಗಳನ್ನು ಚೆನ್ನಾಗಿ ಬೇಯಿಸಿ ಸೇವಿಸಬೇಕು ಎಂದು ಸಲಹೆ ನೀಡಿದೆ.
ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಸಾರ್ವಜನಿಕರಿಗೆ ಹಕ್ಕಿ ಜ್ವರದ (ಹೆಚ್5ಎನ್1) ಬಗ್ಗೆ ಆರೋಗ್ಯ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಈಗಾಗಲೆ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿರುವ ಕೋಳಿ ಸಾಕಾಣಿಕೆ ಕೇಂದ್ರಗಳನ್ನು ಗುರುತಿಸಿ ಮಾಲೀಕರು ಮತ್ತು ನಿರ್ವಹಣಾ ಸಿಬ್ಬಂದಿಗಳಿಗೆ ಅಗತ್ಯ ಮಾಹಿತಿಯನ್ನು ನೀಡಲು ಕ್ರಮವಹಿಸಲಾಗಿದೆ ಎಂದು ಮಾಹಿತಿ ನೀಡಿದೆ.
ಮುಂಜಾಗೃತಾ ಕ್ರಮವಾಗಿ ಎಲ್ಲ ಕೋಳಿ ಸಾಕಾಣಿಕೆ ಫೌಲ್ಟ್ರಿ ಫಾರಂಗಳಲ್ಲಿ ನಿಗಾ ವಹಿಸಬೇಕು ಎಂದು ಪಶು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೋಳಿ ಸಾಕಾಣಿಕೆ ಫೌಲ್ಟ್ರಿ ಫಾರಂಗಳಿಗೆ ಅಧಿಕಾರಿಗಳು ಪರಿಶೀಲನೆ ನಡೆಸಲು ಭೇಟಿ ನೀಡಿದ ಸಂದರ್ಭದಲ್ಲಿ ಮಾಲೀಕರು ಸಹಕರಿಸಬೇಕು. ಫೌಲ್ಟ್ರಿ ಫಾರಂಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ವೈಯಕ್ತಿಕ ಕಾಳಜಿವಹಿಸುವ ಕುರಿತು ಜಾಗೃತಿ ನೀಡಲಾಗುತ್ತಿದೆ, ಅಗತ್ಯವೆನಿಸಿದಲ್ಲಿ ಚಿಕಿತ್ಸೆಗೆ ಯಾವುದೇ ಔಷಧಿಗಳ ಕೊರತೆಯಾಗದಂತೆ ಕ್ರಮವಹಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದಿದೆ.
ಬೆಂಗಳೂರು ನಗರ ಜಿಲ್ಲೆಯ ಗಡಿಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದ್ದು, ಹಕ್ಕಿ ಜ್ವರ ನಿಯಂತ್ರಣಕ್ಕೆ ಕ್ರಮವಹಿಸಲಾಗಿದೆ. ಹಕ್ಕಿ ಜ್ವರಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಸಮಾಲೋಚನೆಗಾಗಿ ಕೂಡಲೇ ಸಹಾಯವಾಣಿಯನ್ನು ಪ್ರಾರಂಭಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಗದೀಶ್ ಜಿ ಹೇಳಿದ್ದಾರೆ.
ಪ್ರಾಣಿ ಆರೋಗ್ಯ ಮತ್ತು ಪಶುವೈದ್ಯಕೀಯ ಜೈವಿಕ ಸಂಸ್ಥೆಯ ವಿಜ್ಞಾನಿ ಡಾ.ರವೀಂದ್ರ ಹೆಗಡೆ ಅವರ ಪ್ರಕಾರ ಹಕ್ಕಿ ಜ್ವರ ವೈರಾಣುಗಳಿಂದ ಉಂಟಾಗಿ, ಸೋಂಕು ತಗುಲಿದ ಹಕ್ಕಿಗಳಿಂದಾಗುವ ವಿಸರ್ಜನೆ, ಶ್ವಾಸೋಚ್ಛಾಸ ಕ್ರಿಯೆ ಮತ್ತು ರಕ್ತದಿಂದ ಹರಡುತ್ತದೆ. ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಸೋಂಕು ಹರಡದಂತೆ ಕ್ರಮ ಕೈಗೊಳ್ಳಬೇಕು ಹಕ್ಕಿಗಳ ಅಸಹಜ ಸಾವು ಕಂಡಬಂದಲ್ಲಿ ತಕ್ಷಣ ಪಶು ಇಲಾಖೆಗೆ ತಿಳಿಸಬೇಕು. ವ್ಯಾಧಿಗೊಳಗಾದ ಅಥವಾ ಆಕಸ್ಮಿಕವಾಗಿ ಮರಣ ಹೊಂದಿದ ಹಕ್ಕಿಗಳನ್ನು ಕೈಯಿಂದ ಮುಟ್ಟಬಾರದು ಎಂದು ಮಾಹಿತಿ ನೀಡಿದ್ದಾರೆ.
ಕೋಳಿ ಮಾಂಸ ಅಥವಾ ಮೊಟ್ಟೆಗಳನ್ನು ಸೇವಿಸುವುದರಿಂದ ಈ ಖಾಯಿಲೆ ಮನುಷ್ಯರಲ್ಲಿ ಬರುವುದಿಲ್ಲ. ಆದರೆ ಸೋಂಕು ತಗುಲಿದ ಕೋಳಿಯ ಮಾಂಸ ಚೆನ್ನಾಗಿ ಬೇಯಿಸದೆ ಹಾಗೂ ಅವುಗಳ ಹಸಿ ಮೊಟ್ಟೆಗಳ ಸೇವನೆಯಿಂದ ರೋಗ ತಗಲುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ಕೋಳಿ ಮಾಂಸ ಮತ್ತು ಮೊಟ್ಟೆಯನ್ನು 70 ಡಿಗ್ರಿ ಸೆಂಟಿಗ್ರೇಡ್ ಗೂ ಅಧಿಕ ಉಷ್ಣಾಂಶದಲ್ಲಿ ಬೇಯಿಸಿದ ನಂತರವೇ ಸೇವಿಸಬೇಕು ಹಾಗೂ ಅಡುಗೆಗಾಗಿ ಕೋಳಿ ಮಾಂಸವನ್ನು ಸಿದ್ಧಪಡಿಸಿದ ನಂತರ ಕೈಗಳನ್ನು ಡಿಸ್ ಇನ್ ಇನ್ಫೆಕ್ಟೆಂಟ್ ನಿಂದ ಸ್ವಚ್ಚವಾಗಿ ತೊಳೆದುಕೊಳ್ಳಬೇಕು. ಸೋಂಕಿತ ಹಸಿ ಮೊಟ್ಟೆಯನ್ನು ಸೇವಿಸಬಾರದು ಎಂದು ಎಚ್ಚರಿಸಿದ್ದಾರೆ.