ಬೆಂಗಳೂರು: ರಾಜ್ಯದಲ್ಲಿ ಮಾ.21ರಿಂದ ಏ.4ರವರೆಗೆ 2818 ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಈ ಬಾರಿ ಪರೀಕ್ಷೆಗೆ ಒಟ್ಟು 896,447 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ.
8,42,817 ಹೊಸ, 38,091 ಪುನರಾವರ್ತಿತರು ಹಾಗೂ 15,539 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ರಾಜ್ಯವ್ಯಾಪಿ ಪರೀಕ್ಷೆಗೆ 15881 ಶಿಕ್ಷಣ ಸಂಸ್ಥೆಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿವೆ. ಇನ್ನು ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ಹಾಗೂ ನಕಲು ತಡೆಯಲು ಎಲ್ಲ 2818 ಕೇಂದ್ರಗಳಲ್ಲಿ ವೆಬ್ ಕ್ಯಾಸ್ಟಿಂಗ್ ಅಳವಡಿಸಲಾಗಿದೆ. ಇಡೀ ಕೇಂದ್ರದಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಇದನ್ನು ಜಿಲ್ಲಾ ಪಂಚಾಯಿತಿ ಸಿಇಒ ಕಚೇರಿಯಲ್ಲಿ ನಿಯಂತ್ರಣ ಕೊಠಡಿಯಿಂದ ನಿಯಂತ್ರಿಸಲಾಗಲಿದೆ. ಎಲ್ಲ ಅಕ್ರಮಗಳು ಕಂಪ್ಯೂಟರ್ ಪರದೆಯಲ್ಲಿ ಗೋಚರವಾಗುವಂತೆ ವ್ಯವಸ್ಥೆ ಮಾಡಲಾಗಿದೆ.
ಮಾ.21 ರಿಂದ ಏ.4 ರವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ಮೇರೆಗೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿರ್ಬಂಧಿಸಲಾಗುತ್ತಿದೆ.
ಕೇವಲ ಸರಳ ಕ್ಯಾಲ್ಕುಲೇಟರ್ ಬಳಸಲು ಅವಕಾಶ:
ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು, ಸರಳ ಕ್ಯಾಲ್ಕುಲೇಟರ್ಗಳನ್ನು ಮಾತ್ರ ಬಳಸಲು ಅವಕಾಶ ನೀಡಲಾಗಿದ್ದು, ಸ್ಟ್ರಾಟಿಸ್ಟಿಕ್ಸ್ ವಿಷಯದಲ್ಲಿ ಮಾತ್ರ ಸೈಂಟಿಫಿಕ್ ಕ್ಯಾಲ್ಕುಲೇಟರ್ ಬಳಸಲು ಅನುಮತಿ ನೀಡಲಾಗಿದೆ. ಪರೀಕ್ಷೆಯ ಅಂತಿಮ ಬೆಲ್ ಹೊಡೆಯುವ ಮುನ್ನ ಪರೀಕ್ಷಾ ಕೊಠಡಿಯಿಂದ ಹೊರಡುವ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಕಡ್ಡಾಯವಾಗಿ ಪಡೆಯಲಾಗುತ್ತದೆ. ಗುರುತಿನ ಚೀಟಿ ಹಾಗೂ ಹಾಲ್ ಟಿಕೆಟ್ ಕಡ್ಡಾಯವಾಗಿ ತರಬೇಕಿದ್ದು, ಮೊಬೈಲ್ ಫೋನ್, ಎಲೆಕ್ಟ್ರಿಕಲ್ ಉಪಕರಣಗಳ ಬಳಕೆ ನಿಷೇಧಿಸಲಾಗಿದೆ.