ಬೆಂಗಳೂರು : ಪ್ರಸಕ್ತ 2025ನೇ ಸಾಲಿನ ನೀಟ್-ಯುಜಿ ಪರೀಕ್ಷೆಯು ಮೇ 4ರ ಮಧ್ಯಾಹ್ನ 2ರಿಂದ ಸಂಜೆ 5ರ ವರೆಗೆ ರಾಜ್ಯದ ಒಟ್ಟು 381 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.
ಅಂದು 1.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಬೆಳಗ್ಗೆ 11ರಿಂದ ಮಧ್ಯಾಹ್ನ 1.30ರೊಳಗೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ತಿಳಿಸಿದೆ.
ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಿರುವ ಗುರುತಿನ ಚೀಟಿ, ಆಧಾರ್ ಕಾರ್ಡ್, ಪಾನ್ ಕಾರ್ಡ್, ಡಿಎಲ್, ಮತದಾರರ ಗುರುತಿನ ಚೀಟಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಗುರುತಿನ ಚೀಟಿಯ ಜೊತೆ ಒಂದು ಪೋಸ್ಟ್ ಕಾರ್ಡ್ ಮತ್ತು ಎರಡು ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಹಾಜರಾಗಬೇಕಿದೆ.
ಬೆಳಿಗ್ಗೆ 11 ಗಂಟೆಯಿಂದ ಎನ್‌ಟಿಎ ವತಿಯಿಂದ ನೇಮಿಸಿರುವ ಏಜೆನ್ಸಿಗಳಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ. ನಿಯೋಜಿತ ಪೊಲೀಸ್ ಸಿಬ್ಬಂದಿ ವಿದ್ಯಾರ್ಥಿಗಳ ಸುರಕ್ಷತಾ ತಪಾಸಣೆ ನಡೆಸಲಿದ್ದಾರೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿದ್ದು, ವಿದ್ಯಾರ್ಥಿಗಳು ಪ್ರವೇಶ ಪತ್ರದಲ್ಲಿ ನೀಡಲಾಗಿರುವ ಸೂಚನೆಗಳ ಅನ್ವಯ ಮಾರ್ಗಸೂಚಿಯನ್ನು ಪಾಲಿಸಬೇಕಿದೆ.
ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಸುತ್ತೋಲೆ:
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಪರೀಕ್ಷಾ ಕೇಂದ್ರಗಳಿಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿ ಹೊರತುಪಡಿಸಿ, ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಪರೀಕ್ಷಾರ್ಥಿಗಳು ಪೂರ್ಣ ತೋಳಿರುವ ಮೇಲಂಗಿ, ದೊಡ್ಡ ಬಟನ್ ಗಳಿರುವ ಶರ್ಟ್, ಪ್ಯಾಂಟ್, ಶೂ, ಸಾಕ್ಸ್, ಎತ್ತರದ ಚಪ್ಪಲಿಗಳು, ಕಿವಿಯೋಲೆ, ಬಳೆ, ಸರ, ಕಾಲ್ಗೆಜ್ಜೆ, ಮೂಗುತಿ, ಜಡೆ ಕ್ಲಿಪ್ ಹಾಗೂ ಇತರ ಯಾವುದೇ ಲೋಹದ ಉಪಕರಣಗಳನ್ನು ಧರಿಸುವಂತಿಲ್ಲ. ಯಾವುದೇ ರೀತಿಯ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತರುವಂತಿಲ್ಲ ಎಂದು ತಿಳಿಸಿದೆ.