ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆ ಸೇರಿದಂತೆ ಇತರೆ ಯಾವುದೇ ಇಲಾಖೆಗಳಲ್ಲಿ ನಿಯೋಜನೆ ಮೇಲೆ 5 ವರ್ಷಗಳ ಅವಧಿ ಮೀರಿ ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಇಲಾಖೆಯ ಅಧಿಕಾರಿ, ನೌಕರರ ನಿಯೋಜನೆಯನ್ನು ರದ್ದುಗೊಳಿಸಿ, ಮಾತೃ ಇಲಾಖೆ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶಿಸಿದೆ.
ಪ್ರಸ್ತುತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಕ್ಷೇತ್ರ ಮಟ್ಟದಲ್ಲಿರುವ ಆರೋಗ್ಯ ಸಂಸ್ಥೆಗಳಾದ ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ಸಿಬ್ಬಂದಿ ಕೊರತೆಯನ್ನು ನೀಗಿಸಿ, ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸುವ ಅವಶ್ಯಕತೆ ಇದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈಗಾಗಲೇ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಇತರೆ ಇಲಾಖೆಗಳಲ್ಲಿ 5 ವರ್ಷದ ಅವಧಿ ಮೀರಿ ನಿಯೋಜನೆ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಇಲಾಖೆಯ ಗ್ರೂಪ್ ಎ.ಬಿ.ಸಿ ಮತ್ತು ಡಿ ವೃಂದಗಳಲ್ಲಿ ಅಧಿಕಾರಿಗಳು ಮತ್ತು ನೌಕರರನ್ನು, ಮಾತೃ ಇಲಾಖೆಯಾದ ಆರೋಗ್ಯ ಇಲಾಖೆಗೆ ಹಿಂಪಡೆದು, ಇಲಾಖೆ ಕರ್ತವ್ಯಗಳಲ್ಲಿ ಕಾರ್ಯ ನಿರ್ವಹಿಸಲು ಬಳಸಿಕೊಳ್ಳಬಹುದಾಗಿದ್ದು, ಇದರಿಂದ ಇಲಾಖೆಗೆ ಹೆಚ್ಚುವರಿ ಮಾನವ ಸಂಪನ್ಮೂಲ ಸೇವೆಯು ದೊರೆಯುತ್ತದೆ. ಮತ್ತಷ್ಟು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಬಹುದಾಗಿದೆ. ಆದ್ದರಿಂದ 5 ವರ್ಷ ನಿಯೋಜನಾ ಅವಧಿ ಮೀರಿರುವ ಎಲ್ಲ ವರ್ಗದ ಸಿಬ್ಬಂದಿಯ ನಿಯೋಜನೆಯನ್ನು ರದ್ದುಗೊಳಿಸಿ, ಮಾತೃ ಇಲಾಖೆ ಕರ್ತವ್ಯಕ್ಕೆ ನಿಯೋಜಿಸಿಕೊಳ್ಳಲು ಆದೇಶ ಹೊರಡಿಸಿದೆ.