Education News

ಶಾಲಾ-ಕಾಲೇಜುಗಳು ಜ್ವರ,ಕೆಮ್ಮು,ಶೀತ ಹೊಂದಿರುವ ಮಕ್ಕಳಿಗೆ ರಜೆ ನೀಡಿ: ಸಿಎಂ ಸಿದ್ದರಾಮಯ್ಯ

Share It

ಬೆಂಗಳೂರು: ಶಾಲಾ-ಕಾಲೇಜುಗಳು ಮುಂಜಾಗೃತಾ ದೃಷ್ಟಿಯಿಂದ ಜ್ವರ, ಕೆಮ್ಮು, ಶೀತ ಹೊಂದಿರುವ ಮಕ್ಕಳಿಗೆ ರಜೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಸೋಮವಾರ ಕಾವೇರಿ ನಿವಾಸದಲ್ಲಿ ಕೋವಿಡ್ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ಆರೋಗ್ಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆಯಲ್ಲಿ ಮಾಹಿತಿ ಪಡೆದು, ಶೀತ, ನೆಗಡಿ, ಜ್ವರ ಸೋಂಕಿನ ಲಕ್ಷಣಗಳಿರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸದಿರುವುದು ಆರೋಗ್ಯಕರ, ಶಾಲೆಗಳೂ ಈ ಬಗ್ಗೆ ಗಮನಹರಿಸಿ ಅಂತಹ ಮಕ್ಕಳನ್ನು ವಾಪಾಸ್ ಪೋಷಕರ ಮೂಲಕ ಮನೆಗೆ ಕಳುಹಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ, ಅಗತ್ಯವಾದ ಎಲ್ಲ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಿ, ಕಳೆದ ಬಾರಿಯಂತೆ ಸಮಸ್ಯೆಯಾಗಬಾರದು. ಕೋವಿಡ್ ಸಹಾಯವಾಣಿಯನ್ನು ತೆರೆಯಬೇಕು ಎಂದು ತಿಳಿಸಿದ್ದಾರೆ.

ಪ್ರತೀ ವಾರ ಅಥವಾ ಅಗತ್ಯವಿದ್ದಲ್ಲಿ ಮೂರು ದಿನಕ್ಕೊಮ್ಮೆ ಪರಿಸ್ಥಿತಿಯ ಪರಿಶೀಲನೆ ನಡೆಸುತ್ತಾ, ಕೋವಿಡ್ ಪ್ರಕರಣದ ಕುರಿತು ತೀವ್ರ ನಿಗಾವಹಿಸಿ, ಮುಂಜಾಗೃತಾ ಕ್ರಮ ವಹಿಸಬೇಕು. ಆಸ್ಪತ್ರೆಗಳಲ್ಲಿ ಅಗತ್ಯ ವ್ಯವಸ್ಥೆ ಮಾಡಿಕೊಂಡಿರಬೇಕು. ಸದ್ಯಕ್ಕೆ ಆತಂಕ ಪಡುವ ಪರಿಸ್ಥಿತಿ ಬಂದಿಲ್ಲವಾದರೂ ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ದಪಡಿಸಿಟ್ಟುಕೊಳ್ಳಬೇಕು. ಅಲ್ಲದೇ, ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸಬೇಕು. ಜತೆಗೆ ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದರೆ, ಅವರನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದನ್ನು ನಿಲ್ಲಿಸಿ, ಎಲ್ಲ ಅಗತ್ಯ ವ್ಯವಸ್ಥೆಗಳನ್ನು ಇದ್ದಲ್ಲಿಯೇ ಮಾಡಿಕೊಂಡಿರಬೇಕು ಎಂದಿದ್ದಾರೆ.

ಕಳೆದ ಜನವರಿಯಿಂದಲೂ ಕೊರೊನಾ ಪ್ರಕರಣಗಳು ಅಲ್ಲಲ್ಲಿ ಒಂದೆರಡು ಕಾಣಬರುತ್ತಿದ್ದು, ಮೇ ತಿಂಗಳಲ್ಲಿ ಉಲ್ಬಣವಾಗಿದೆ. ಮೇ ತಿಂಗಳ ನಾಲ್ಕನೇ ವಾರಕ್ಕೆ 62 ಪ್ರಕರಣಗಳು ವರದಿಯಾಗಿವೆ. ಆದರೆ, ಗಂಭೀರ ಎನ್ನುವಂತಹ ಪ್ರಕರಣಗಳ ಸಂಖ್ಯೆ ಒಂದು ಮಾತ್ರ ಇದೆ. ಎಸ್‌ಎಆರ್‌ಐ ಪ್ರಕರಣಗಳಲ್ಲಿ ತಪಾಸಣೆ ಕಾರ್ಯ ಈಗಾಗಲೇ ನಡೆಯುತ್ತಿದೆ. ನೆರೆಯ ರಾಜ್ಯಗಳಾದ ಕೇರಳದಲ್ಲಿ 95, ತಮಿಳು ನಾಡಿನಲ್ಲಿ 66, ಮಹಾರಾಷ್ಟ್ರ ಗಳಲ್ಲಿ 56 ಪ್ರಕರಣಗಳು ವರದಿಯಾಗಿವೆ. ಹಾಗಾಗಿ ಆರೋಗ್ಯ ಇಲಾಖೆ ಸಿಬ್ಬಂದಿ ರಜಾ ಹಾಕಿ ತೆರಳದೆ, ಕೇಂದ್ರ ಸ್ಥಾನದಲ್ಲಿಯೇ ಇದ್ದು ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದ್ದಾರೆ.

ಕೋವಿಡ್ ಪ್ರಕರಣಗಳು ಇದೇ ರೀತಿ ಏರಿಕೆ ಕಂಡುಬರುತ್ತಿದ್ದರೆ, ಮುಂದಿನ ದಿನಗಳಲ್ಲಿ ವಿಮಾನ ನಿಲ್ದಾಣಗಳಲ್ಲಿ ಹೊರಗಡೆಯಿಂದ ಬರುವ ಪ್ರಯಾಣಿಕರಿಗೆ, ತಪಾಸಣಾ ಘಟಕಗಳನ್ನು ಪ್ರಾರಂಭಿಸಲು ಕ್ರಮ ವಹಿಸುವ ಜತೆಗೆ ರೂಪಾಂತರಿ ಕೊರೊನಾ ವೈರಾಣುವಿಗೆ ಸಂಬಂಧಿಸಿದಂತೆ ರೋಗ ನಿಯಂತ್ರಣದ ಮುನ್ನೆಚ್ಚರಿಕೆಯಾಗಿ ವ್ಯಾಕ್ಸಿನ್‌ಗಳನ್ನು ಸಿದ್ದವಾಗಿಟ್ಟುಕೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.


Share It

You cannot copy content of this page