ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾರ್ವಜನಿಕ ರಜಾ ದಿನವಾದ ಭಾನುವಾರವೂ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷಾ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸುವಂತೆ ಪಾಲಿಕೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬುಧವಾರ ದಕ್ಷಿಣ ಹಾಗೂ ಬೊಮ್ಮನಹಳ್ಳಿ ವಲಯಗಳಲ್ಲಿ ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯಕ್ಕೆ ಸಂಬಂಧಿಸಿದಂತೆ ಆಯಾ ವಲಯ ಕಛೇರಿಗಳಲ್ಲಿ ಅಧಿಕಾರಿಗಳ ಜೊತೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು. ಈ ಉದ್ದೇಶದಿಂದ ಪರಿಶಿಷ್ಟ ಜಾತಿ ಸಮುದಾಯಗಳು ಹೆಚ್ಚು ವಾಸವಿರುವ ಪ್ರದೇಶಗಳಲ್ಲಿ ಬೂತ್ ಮಟ್ಟದಲ್ಲಿ ಪ್ರಚಾರ ಕಾರ್ಯಗಳನ್ನು ಕೈಗೊಳ್ಳಲು ಸಹಾಯಕ ಕಂದಾಯ ಅಧಿಕಾರಿಗಳಿಗೆ ಸೂಚಿಸಿದರು.
ಬೂತ್ ಮಟ್ಟದಲ್ಲಿ ಹಾಗೂ ವಾರ್ಡ್ ಮಟ್ಟದಲ್ಲಿ ಜಾಗೃತಿ ಮೂಡಿಸಲು ಗಣತಿದಾರರ ಹೆಸರು ಮತ್ತು ಸಂಪರ್ಕ ವಿವರಗಳಿರುವ ಪಟ್ಟಿ ಸಿದ್ದಪಡಿಸಬೇಕು. ಆಯಾ ವಾರ್ಡ್ ವ್ಯಾಪ್ತಿಯಲ್ಲಿ ಈ ಬಗ್ಗೆ ಹೆಚ್ಚು ಪ್ರಚಾರ ಮಾಡಿ ಪರಿಶಿಷ್ಟ ಜಾತಿ ಸಮುದಾಯದ ಎಲ್ಲರೂ ಸಮೀಕ್ಷಾ ಕಾರ್ಯದಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದು ತಿಳಿಸಿದರು.
ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಗಳ ಸಹಾಯದಿಂದ ಅಪಾರ್ಟ್ ಮೆಂಟ್ ಗಳಲ್ಲಿ ಸಮೀಕ್ಷಾ ಕಾರ್ಯ ಮಾಡಲು ವಿಶೇಷ ಅಭಿಯಾನ ಹಮ್ಮಿಕೊಳ್ಳಬೇಕು. ಸಮೀಕ್ಷಾ ಕಾರ್ಯ ನಡೆಯುತ್ತಿರುವ ಕುರಿತು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳಿಗೆ ನಿಖರ ಮಾಹಿತಿ ನೀಡಲು ಅಧಿಕಾರಿಗಳಿಗೆ ಹೇಳಿದರು.
ಈ ವೇಳೆ ಬಿಬಿಎಂಪಿ ಸಮನ್ವಯ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್, ವಲಯ ಆಯುಕ್ತೆ ರಮ್ಯಾ, ದಿಗ್ವಿಜಯ್ ಬೋಡ್ಕೆ, ವಲಯ ಜಂಟಿ ಆಯುಕ್ತ ಮಧು, ಅಜಿತ್, ಕಂದಾಯ ಅಧಿಕಾರಿಗಳು ಸೇರಿದಂತೆ ಇನ್ನಿತರ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
