News

ಹೆಚ್ಚುವರಿ ಪೊಲೀಸ್ ಆಯುಕ್ತರು, ಕಮೀಷನರ್ ಸೇರಿದಂತೆ ಹಲವು ಅಧಿಕಾರಿಗಳ ಅಮಾನತು: ಸಿಎಂ ಸಿದ್ದರಾಮಯ್ಯ

Share It

ಬೆಂಗಳೂರು: ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಞರ್ ಸೇರಿದಂತೆ ಕೇಂದ್ರ ವಿಭಾಗದ ಭಾಗದ ಎಸಿಪಿ, ಡಿಸಿಪಿ, ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗುರುವಾರ ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆರ್.ಸಿ.ಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ವಿಷಾದನೀಯವಾಗಿದೆ, ಮೃತಪಟ್ಟವರಿಗೆ ಸಂತಾಪ ಕೋರುತ್ತೇನೆ. ಇಂದು ಎಂದಿನಂತೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಯಿತು, ಅಲ್ಲಿ ಅಹಿತಕರ ಘಟನೆ ಬಗ್ಗೆ ಚರ್ಚಿಸಿ ಪೋಲಿಸ್ ಅಧಿಕಾರಿಗಳನ್ನು ಅಮಾನತು ಗೊಳಿಸುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಜಸ್ಟೀಸ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ. ಆರ್.ಸಿ.ಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿ.ಎನ್.ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿದೆ. ಇವರುಗಳ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ ಎಂದು ಮಾಹಿತಿ ನೀಡಿದರು.

ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಞರ್ ಸೇರಿದಂತೆ ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ , ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು ತಕ್ಷಣದಿಂದ ಅಮಾನತ್ತು ಗೊಳಿಸಲು ತೀರ್ಮಾನಿಸಲಾಗಿದೆ. ಈ ದುರಂತಕ್ಕೆ ಸಂಬಂಧಪಟ್ಟ ಚರ್ಚೆಯ ನಂತರ ತೆಗೆದುಕೊಂಡ ತೀರ್ಮಾನಗವಾಗಿದೆ. ಉಪಮುಖ್ಯಮಂತ್ರಿಗಳು, ಗೃಹಸಚಿವರು, ಸಚಿವರಾದ ಎಚ್.ಕೆ.ಪಾಟೀಲ್, ಸುಧಾಕರ್ , ಮಹಾದೇವಪ್ಪ ಸೇರಿದಂತೆ ಅಧಿಕಾರಿಗಳು ಚರ್ಚೆಯಲ್ಲಿ ಭಾಗವಹಿಸಿದ್ದರು ಎಂದರು.

ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡುಬರುತ್ತಿದ್ದು, ಇವರುಗಳನ್ನು ಅಮಾನತ್ತುಗೊಳಿಸಲು ತೀರ್ಮಾನಿಸಲಾಗಿದೆ. ನಾನು ಶಾಸಕರು, ಸಚಿವ, ಡಿಸಿಎಂ ಹಾಗೂ ಮುಖ್ಯಮಂತ್ರಿಯಾದ ನಂತರ ಇಂತಹ ಘಟನೆ ನಡೆದಿರಲಿಲ್ಲ. ಈ ಘಟನೆ ನಮ್ಮನ್ನು ಘಾಸಿಗೊಳಿಸಿದೆ. ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತೇನೆ, ಕುಟುಂಬದವರ ಜೊತೆ ಸರ್ಕಾರವಿದೆ. ನಿನ್ನೆ ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮೂರು ಸಂಸ್ಥೆಗಳು ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.


Share It

You cannot copy content of this page