ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ- 3 ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರವನ್ನು ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶವನ್ನು ಬಿಎಂಟಿಸಿ ಕಲ್ಪಿಸಿದೆ.
ಪರೀಕ್ಷೆ- 3 ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳು ಬೇರೆ ಬೇರೆ ಕಾಲೇಜುಗಳಲ್ಲಿ ಇರುವುದರಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಜೂನ್ 9 ರಿಂದ 20 ರವರೆಗೆ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗಲು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ದ್ವಿತೀಯ ಪಿ.ಯು.ಸಿ ಪರೀಕ್ಷಾ ದಿನಾಂಕಗಳಂದು ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲಾ ಮಾರ್ಗಗಳನ್ನು, ಸುತ್ತುವಳಿಗಳನ್ನು ಕಾರ್ಯಾಚರಣೆಗೊಳಿಸಲಾಗುವುದು. ಹೆಚ್ಚುವರಿ ಸುತ್ತುವಳಿಗಳ ಕಾರ್ಯಾಚರಣೆಯ ಅಗತ್ಯತೆ ಕಂಡುಬಂದಲ್ಲಿ ವ್ಯವಸ್ಥೆ ಮಾಡಲಾಗುವುದು. ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು/ಪೋಷಕರು ಕೋರಿಕೆ ನಿಲುಗಡೆ ಕೋರಿದಲ್ಲಿ, ಕೋರಿಕೆ ನಿಲುಗಡೆ ನೀಡಲು ಸಹ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಎಂಟಿಸಿ ತಿಳಿಸಿದೆ.