ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಹಾಜರಾಗಿ ವಿಚಾರಣೆ ಎದುರಿಸುವಂತೆ ಬೆಂಗಳೂರಿನ ಕೆಆರ್ ಪುರ ಶಾಸಕ ಬೈರತಿ ಬಸವರಾಜ ಅವರಿಗೆ ಹೈಕೋರ್ಟ್ ನಿರ್ದೇಶಿಸಿದೆ.
ಪ್ರಕರಣ ಸಂಬಂಧ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಬೈರತಿ ಬಸವರಾಜ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಸ್ ಆರ್ ಕೃಷ್ಣಕುಮಾರ್ ಅವರಿದ್ದ ಪೀಠ ಈ ಸೂಚನೆ ನೀಡಿ, ವಿಚಾರಣೆಯನ್ನು ಜುಲೈ 23ಕ್ಕೆ ಮುಂದೂಡಿದೆ.
ವಿಚಾರಣೆ ವೇಳೆ ಬೈರತಿ ಬಸವರಾಜ ಪರ ವಕೀಲರು ವಾದ ಮಂಡಿಸಿ, ವಿಚಾರಣೆಗೆ ಹಾಜರಾಗಲು ಅನುಮತಿಸಿದರೆ, ಬಸವರಾಜ ಅವರನ್ನು ಬಂಧಿಸಬಾರದು. ಅವರ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂದು ನ್ಯಾಯಾಲಯವನ್ನು ಕೋರಿದರು.
ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ರಾಜ್ಯ ಸರ್ಕಾರಿ ಅಭಿಯೋಜಕ ಬಿ.ಎ.ಬೆಳ್ಳಿಯಪ್ಪ ಅವರು, ಶಾಸಕ ಬಸವರಾಜ ಅವರನ್ನು ಬಂಧಿಸದಂತೆ ಪೊಲೀಸರಿಗೆ ನಿರ್ದೇಶನ ನೀಡಬಾರದು. ಪೊಲೀಸರು ತನಿಖೆ ನಡೆಸಲು ಅವಕಾಶ ಮಾಡಿಕೊಡಬೇಕು ಎಂದು ವಾದಿಸಿದರು.
ವಾದ ಆಲಿಸಿದ ನ್ಯಾಯಾಲಯ ಪೊಲೀಸರು ನೀಡಿರುವ ನೋಟಿಸ್ ಪ್ರಕಾರ ಬಸವರಾಜ ವಿಚಾರಣೆಗೆ ಹಾಜರಾಗಲಿ. ತನಿಖೆ ನಡೆಯಲಿ. ಬಸವರಾಜ ವಿಚಾರಣೆಗೆ ಹಾಜರಾದರೆ ಅರ್ನೇಶ್ ಕುಮಾರ್ ಪ್ರಕರಣದಲ್ಲಿ ಸುಪ್ರಿಂ ಕೋರ್ಟ್ ನೀಡಿರುವ ತೀರ್ಪಿನ ನಿರ್ದೇಶನಗಳನ್ನು ಪಾಲಿಸಬೇಕು ಎಂದು ನಿರ್ದೇಶನ ನೀಡಿ ವಿಚಾರಣೆಯನ್ನು ಜುಲೈ 23ಕ್ಕೆ ಮುಂದೂಡಿತು.