ಬೆಂಗಳೂರು: ಅತ್ಯಾಚಾರ ಆರೋಪದಡಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಇಂದು ತೀರ್ಪು ಪ್ರಕಟಿಸಿದ್ದು, ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ಪ್ರಕಟಿಸಿದ್ದಾರೆ.
ಆರೋಪಿಯ ವಿರುದ್ಧದ ಅಪರಾಧ ರುಜುವಾತಾಗಿದ್ದು, ಪ್ರಜ್ವಲ್ ರೇವಣ್ಣಗೆ ಎಷ್ಟು ಶಿಕ್ಷೆ ವಿಧಿಸಬೇಕು ಎಂಬುದನ್ನು ನ್ಯಾಯಾಲಯ ಇನ್ನಷ್ಟೇ ನಿರ್ಧರಿಸಬೇಕಿದೆ. ಕಾನೂನು ರೀತ್ಯಾ ಅತ್ಯಾಚಾರ ಅಪರಾಧಕ್ಕೆ ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ ಶಿಕ್ಷೆ ಇದ್ದು, ಎಷ್ಟು ಶಿಕ್ಷೆ ವಿಧಿಸಬೇಕು ಎಂಬುದನ್ನು ನ್ಯಾಯಾಲಯ ನಿರ್ಧರಿಸಲಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 29 ರಂದೇ ವಿಚಾರಣೆ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಲಾಗಿತ್ತು. ಇದೀಗ ಪ್ರಜ್ವಲ್ ಅಪರಾಧಿ ಎಂದು ನ್ಯಾಯಾಲಯ ತೀರ್ಮಾನಿಸಿದೆ.
ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ತೀರ್ಪು ನೀಡಿದೆ. ಇನ್ನುಳಿದ ಪ್ರಕರಣಗಳು ವಿಚಾರಣೆ ಹಂತದಲ್ಲಿವೆ.
ನ್ಯಾಯಾಲಯ ತೀರ್ಪು ಪ್ರಕಟಿಸುತ್ತಿದ್ದಂತೆ ಅಪರಾಧಿ ಪ್ರಜ್ವಲ್ ರೇವಣ್ಣ ಕಣ್ಣೀರು ಒರೆಸುತ್ತಲೇ ಅಲ್ಲಿಂದ ತೆರಳಿದ್ದಾರೆ.