ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್ ಅವರು ಕೆರಿಬಿಯನ್ ದ್ವೀಪ ರಾಷ್ಟ್ರ ಬಾರ್ಬೆಡೋಸ್ ನಲ್ಲಿ ಸ್ಪೀಕರ್ ಗಳ ಕಾನ್ಫರೆನ್ಸ್ ನಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅವರು ಬೆಂಗಳೂರು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಸ್ವೀಕರಿಸುತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವುದು ಚರ್ಚೆಗೆ ಗ್ರಾಸವಾಗುತ್ತಿದೆ.
ಸ್ವತಃ ಯುಟಿ ಖಾದರ್ ಅವರು ಎಐ ಜನೆರೇಟೆಡ್ ಫೋಟೋದ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದ್ದು, ನಾನೇ ನನ್ನ ಕಣ್ಣನ್ನು ನಂಬಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ. ತಂತ್ರಜ್ಞಾನ ಇಷ್ಟು ಮುಂದುವರೆದಿರುವ ಬಗ್ಗೆ ಸೋಜಿಗ ವ್ಯಕ್ತಪಡಿಸಿದ್ದಾರೆ.
ಬುಧವಾರ ನೆಡೆದ ಬೆಂಗಳೂರು ವಿವಿ ಘಟಿಕೋತ್ಸವ:
ಬುಧವಾರ ಜ್ಞಾನಜ್ಯೋತಿ ಸಭಾಂಗಣದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ 60 ನೇಯ ಘಟಿಕೋತ್ಸವ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆಗಿರುವ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಿಧಾನ ಪರಿಷತ್ತಿನ ಮಾಜಿ ಸದಸ್ಯರು ಮತ್ತು ಸಮಾಜ ಸೇವಕರಾದ ಡಿ. ಮಾದೇಗೌಡ, ಜೆ.ಪಿ. ಅಗ್ರಿ ಜೆನೆಟಿಕ್ಸ್ ಪ್ರೈವೇಟ್ ಲಿಮಿಟೆಡ್ ನ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿರುವ ಡಾ.ಟಿ.ಬಿ.ಪ್ರಸನ್ನ ಮತ್ತು ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ ಖಾದರ್ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ನೀಡಿದರು. ಬಾರ್ಬೆಡೋಸ್ ನಲ್ಲಿ ನೆಡೆಯುತ್ತಿರುವ ಸ್ಪೀಕರ್ಸ್ ಶೃಂಗಸಭೆಯಲ್ಲಿ ಭಾಗವಹಿಸಿರುವ ಕಾರಣಕ್ಕೆ ಯು.ಟಿ ಖಾದರ್ ಅನುಪಸ್ಥಿತಿಯಲ್ಲಿ ಸಾಂಕೇತಿಕವಾಗಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.