News

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ರಾಜ್ಯದಲ್ಲಿ ಒಂದು ವಾರ ವ್ಯಾಪಕ ಮಳೆ

Share It

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ಒಂದು ವಾರ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅ.21ರಿಂದ 27ರವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಅಲ್ಲಿನ ಬಹುತೇಕ ಎಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಇನ್ನು ನಾಳೆಗೆ ಅನ್ವಯವಾಗುವಂತೆ ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಇದೇ ಅವಧಿಯಲ್ಲಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಹಾವೇರಿ, ಗದಗ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಅಧಿಕವಾಗಿರಲಿದೆ. ಈ ನಡುವೆ, ಸೋಮವಾರ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಒಂದೆರಡು ಸ್ಥಳದಲ್ಲಿ ಮಾತ್ರ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇಂದಿನ ಮಳೆಯ ಪ್ರಮಾಣಗಳು:

ಹಾಸನ ಜಿಲ್ಲೆಯ ಅರಕಲಗೂಡಿನಲ್ಲಿ 8 ಸೆಂ.ಮೀ., ಶಿವಮೊಗ್ಗ ಜಿಲ್ಲೆಯ ಅನವಟ್ಟಿ, ತುಮಕೂರು ಜಿಲ್ಲೆಯ ಕುಣಿಗಲ್, ದಕ್ಷಿಣ ಕನ್ನಡ ಜಿಲ್ಲೆಯ ಶಕ್ತಿನಗರದಲ್ಲಿ ತಲಾ 7 ಸೆಂ.ಮೀ., ಚಿಕ್ಕಮಗಳೂರು ಜಿಲ್ಲೆಯ ಕಡೂರು, ಕಮ್ಮರಡಿ, ತುಮಕೂರು ಜಿಲ್ಲೆಯ ಕಿಬ್ಬನಹಳ್ಳಿಯಲ್ಲಿ ತಲಾ 6 ಸೆಂ.ಮೀ., ಮಂಡ್ಯ ಜಿಲ್ಲೆಯ ಬೆಳ್ಳೂರು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಹಾವೇರಿ ಜಿಲ್ಲೆಯ ಹಿರೇಕೆರೂರು, ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ, ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರದಲ್ಲಿ ತಲಾ 5 ಸೆಂ.ಮೀ. ಮಳೆಯಾಗಿದೆ.


Share It

You cannot copy content of this page