ಬೆಂಗಳೂರು: ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದ ಕರಾವಳಿಗಳಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಳೆ ಮುಂದುವರೆದಿದ್ದು, ಈ ಹಿನ್ನಲೆಯಲ್ಲಿ ಮುಂದಿನ 24 ಗಂಟೆಗಳಿಗೆ ಅನ್ವಯಿಸುವಂತೆ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಬುಧವಾರ ಸಂಜೆಯಿಂದ ಗುರುವಾರ ಮಧ್ಯಾಹ್ನದ ವರೆಗೆ ಆರೆಂಜ್ ಅಲರ್ಟ್ ಕೊಡಲಾಗಿದೆ. ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಚಿತ್ರದುರ್ಗ, ದಾವಣಗೆರೆ, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ದಾವಣಗೆರೆ, ವಿಜಯನಗರ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿಮೀ ಗಾಳಿ ಬೀಸುವ ಸಾಧ್ಯತೆ ಇದ್ದು ಅದರೊಂದಿಗೆ ಭಾರಿ ಮಳೆಯಾಗಲಿದೆ. ಇನ್ನು ಬಳ್ಳಾರಿ, ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಸಿಲಿಕಾನ್ ಸಿಟಿಯಲ್ಲಿ ಹಗುರ ಮಳೆ:
ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಹಗುರದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 26 ಮತ್ತು 21 ಡಿಗ್ರಿ ಇರುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಈಶಾನ್ಯ ಮಾನ್ಸೂನ್ ಸಕ್ರಿಯ:
ಕರ್ನಾಟಕದ ಉತ್ತರ ಒಳನಾಡಿನಲ್ಲಿ ಈಶಾನ್ಯ ಮಾನ್ಸೂನ್ ಸಕ್ರಿಯವಾಗಿದ್ದು ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿದೆ. ಈ ಕಾರಣಕ್ಕೆ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಕಳೆದ ಒಂದು ದಿನದ ಅಂಕಿ ಅಂಶಗಳ ಪ್ರಕಾರ ಅತಿ ಹೆಚ್ಚು ಮಳೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮತ್ತು ಮಂಕಿ ಜಿಲ್ಲೆಗಳಲ್ಲಿ ತಲಾ 5 ಸೆಂ. ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ 4 ಸೆಂ. ದಾಖಲಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ. ಎಸ್ ಪಾಟೀಲ್ ತಿಳಿಸಿದ್ದಾರೆ.
