ಎಸ್ಸಿ-ಎಸ್ಟಿ ಸಮುದಾಯಕ್ಕೆ ಮೀಸಲಿಟ್ಟ ಹುದ್ದೆಗಳನ್ನು ಭರ್ತಿ ಮಾಡದಿರುವುದು ಆ ಸಮುದಾಯಗಳಿಗೆ ಸರ್ಕಾರಿ ಸೇವೆಯಲ್ಲಿ ಅವರ ಪ್ರಾತಿನಿಧ್ಯ ಕಿತ್ತುಕೊಂಡಂತೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಅಲ್ಲದೇ ಎಲ್ಲ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಖಾಲಿಯಿರುವ ಬ್ಯಾಕ್ ಲಾಗ್ ಹುದ್ದೆಗಳನ್ನು ಸಮರೋಪಾದಿಯಾಗಿ ಭರ್ತಿ ಮಾಡಬೇಕು ಎಂದು ತೀರ್ಪು ನೀಡಿದೆ. ಬೆಂಗಳೂರಿನ ವೈದ್ಯಕೀಯ ವಿವಿಯಲ್ಲಿರುವ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಈ ತೀರ್ಪು ಪ್ರಕಟಿಸಿದೆ.
ಪೀಠ ತನ್ನ ತೀರ್ಪಿನಲ್ಲಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದಲಿತ ಸಮುದಾಯಗಳಿಗೆ ಮೀಸಲಾಗಿರುವ ಹುದ್ದೆಗಳನ್ನು ತಪ್ಪದೇ ಭರ್ತಿ ಮಾಡಬೇಕು. ಭರ್ತಿ ಮಾಡದೆ ಖಾಲಿ ಉಳಿಸುವುದುಕೊಳ್ಳುವುದು ಸಂವಿಧಾನವು ಈ ಸಮುದಾಯಗಳಿಗೆ ಕಲ್ಪಿಸಿರುವ ಸೌಲಭ್ಯಗಳನ್ನು ನಿರಾಕರಿಸಿದಂತೆ ಆಗುತ್ತದೆ. ಆದ್ದರಿಂದ ರಾಜ್ಯ ಸರ್ಕಾರದ ಎಲ್ಲ ಇಲಾಖೆ ಮತ್ತು ಸಂಸ್ಥೆಗಳಲ್ಲಿ ಖಾಲಿಯಿರುವ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಮುಂದಿನ ಆರು ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ.
ಪ್ರಕರಣದ ಹಿನ್ನೆಲೆ: ಬೆಂಗಳೂರಿನ ವೈದ್ಯಕೀಯ ಮಹಾವಿದ್ಯಾಲಯದಲ್ಲಿರುವ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡುವಂತೆ ಕೋರಿ ಮಂಜುನಾಥ್ ಪ್ರಸಾದ್ ಎಂಬುವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಏಕ ಸದಸ್ಯ ಪೀಠ, ಈ ವಿಚಾರವಾಗಿ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಮನವಿ ಸಲ್ಲಿಸುವಂತೆ ಸೂಚಿಸಿ ಅರ್ಜಿ ಇತ್ಯರ್ಥಪಡಿಸಿತ್ತು. ಈ ಹಿನ್ನೆಲೆಯಲ್ಲಿ ಅರ್ಜಿದಾರರು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.
ಮೇಲ್ಮನವಿ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಬ್ಯಾಕ್ ಲಾಗ್ ಹುದ್ದೆಗಳು ಮೀಸಲು ನೇಮಕಾತಿಗಳಾಗಿವೆ. ಈ ಹುದ್ದೆಗಳನ್ನ ಭರ್ತಿ ಮಾಡದೆ ಖಾಲಿ ಉಳಿಸುವುದು ಸಂವಿಧಾನದ ವಿಧಿ 14 (ಸಮಾನತೆ) ಮತ್ತು 16 ರ (ರಾಜ್ಯಗಳ ಉದ್ಯೋಗವಕಾಶದಲ್ಲಿ ಸಮಾನ ಅವಕಾಶ ಕಲ್ಪಿಸುವ) ಉಲ್ಲಂಘನೆಯಾಗಲಿದೆ ಎಂದು ವಾದಿಸಿದ್ದರು. ಸರ್ಕಾರದ ಪರ ವಕೀಲರು ಏಕ ಸದಸ್ಯ ಪೀಠದ ಆದೇಶ ಸಮಂಜಸವಾಗಿದ್ದು, ಮೇಲ್ಮನವಿ ಅರ್ಜಿ ವಜಾಗೊಳಿಸಬೇಕು ಎಂದು ಕೋರಿದ್ದರು.
ಸರ್ಕಾರದ ವಾದ ತಿರಸ್ಕರಿಸಿರುವ ವಿಭಾಗೀಯ ಪೀಠ, ರಾಜ್ಯ ಸರ್ಕಾರ ರಚನೆ ಮಾಡಿದ್ದ ಸಂಪುಟ ಉಪ ಸಮಿತಿಯು ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಈ ಹಿಂದೆ ಹೈಕೋರ್ಟ್ ನೀಡಿದ್ದ ಆದೇಶದಂತೆ ಎಲ್ಲ ಇಲಾಖೆಗಳಿಗೆ ಪತ್ರ ಬರೆದು ಹುದ್ದೆಗಳ ಭರ್ತಿಗೆ ನಿರ್ದೇಶನ ನೀಡಿದೆ. ಖಾಲಿ ಹುದ್ದೆಗಳನ್ನು ಮುಂದುವರೆಸುವ ಸಂಬಂಧ ಅಂಕಿ ಅಂಶಗಳನ್ನು ನೋಡಿದ ಬಳಿಕವೂ ಮೇಲ್ಮನವಿ ವಜಾಗೊಳಿಸುವಂತೆ ಸರ್ಕಾರಿ ವಕೀಲರು ವಾದಿಸುವುದು ವಿಚಿತ್ರವಾಗಿದೆ. ನೊಂದ ನಾಗರಿಕ ನ್ಯಾಯಲಯದಲ್ಲಿ ಕಾನೂನು ಹೋರಾಟ ನಡೆಸಿ ಗೆಲುವು ಸಾಧಿಸಿದಲ್ಲಿ ಸರ್ಕಾರ ಸಂತೋಷಪಡಬೇಕು ಎಂದು ಅಭಿಪ್ರಾಯಪಟ್ಟು, ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಸೂಚಿಸಿದೆ.
WRIT APPEAL NO. 797 OF 2023 (S-RES)
