ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಒತ್ತುವರಿ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ಜತೆಗೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ ಜರುಗಿಸಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಸರ್ಕಾರಿ ಭೂಮಿ ಒತ್ತುವರಿ ತೆರವು ಸಂಬಂಧ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
ಒತ್ತುವರಿಯನ್ನು ತಡೆಯದ ಅಧಿಕಾರಿಗಳೇ ಇದಕ್ಕೆಲ್ಲ ಕಾರಣ. ಹೀಗಾಗಿ ಒತ್ತುವರಿ ತೆರವು ಮಾಡುವುದರ ಜೊತೆಗೆ ತಪ್ಪಿತಸ್ಥ ಅಧಿಕಾರಿಗಳನ್ನು ಗುರುತಿಸಿ ಅವರ ವಿರುದ್ಧ ಕ್ರಮ ಜರುಗಿಸಲು ಸರ್ಕಾರ ಮುಂದಾಗಬೇಕು. ಇಲ್ಲವಾದರೆ ಇಂತಹ ಪ್ರಕರಣಗಳು ಮರುಕಳಿಸುತ್ತಲೇ ಇರುತ್ತವೆ. ಹೀಗಾಗಿ ಒತ್ತುವರಿಗೆ ಕಾರಣರಾದ ಸರ್ಕಾರಿ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲೇಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶಿಸಿದೆ.
ಅಲ್ಲದೇ, ಪಿಐಎಲ್ ರೂಪದಲ್ಲಿ ನ್ಯಾಯಾಲಯದ ಮುಂದಿರುವ ಬೆಂಗಳೂರಿನ ಒಂದು ಪ್ರಕರಣ ಕೇವಲ ಒಂದು ಉದಾಹರಣೆ ಅಷ್ಟೇ. ಇಂತಹ ನೂರಾರು ಪ್ರಕರಣಗಳಿವೆ. ಸರ್ಕಾರ ಅವುಗಳ ಬಗ್ಗೆ ಗಮನ ಹರಿಸಬೇಕು. ಸರ್ಕಾರಿ ಭೂಮಿ ಒತ್ತುವರಿ ಮಾಡಿ ಬೃಹತ್ ಕಟ್ಟಡಗಳ ನಿರ್ಮಾಣ ಮಾಡುವುದರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಬೇಕು ಎಂದು ಹೈಕೋರ್ಟ್ ತಾಕೀತು ಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶ ಪಾಲನೆಯ ಕುರಿತು ಸರ್ಕಾರ ಸಮಗ್ರ ವರದಿಯನ್ನು ಸಲ್ಲಿಸುವಂತೆ ಸೂಚನೆ ನೀಡಿದೆ.
