ಭ್ರಷ್ಟಾಚಾರ, ಕುಡಿದು ವಾಹನ ಚಲಾಯಿಸಿದ್ದು ಹಾಗೂ ಸಾರ್ವಜನಿಕರಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಭಟ್ಕಳ ಸಿಪಿಐ ಮಂಜುನಾಥ್ ಲಿಂಗಾರೆಡ್ಡಿ ಹಾಗೂ ಹೆಡ್ ಕಾನ್ಸ್ಟೇಬಲ್ ಅಶೋಕ್ ನಾಯ್ಕ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಉತ್ತರ ಕನ್ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಈ ಆದೇಶ ಹೊರಡಿಸಿದ್ದು, ಕೆಲವು ದಿನಗಳ ಹಿಂದೆ ಸಿಪಿಐ ಮಂಜುನಾಥ್ ಲಿಂಗಾರೆಡ್ಡಿ ಅವರ ವಿರುದ್ಧ ‘ಡ್ರಂಕ್ ಆಂಡ್ ಡ್ರೈವ್’ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ನಡೆದ ಪ್ರಾಥಮಿಕ ತನಿಖೆಯಲ್ಲಿ ಅವರು ಮದ್ಯಪಾನ ಮಾಡಿ ವಾಹನ ಚಲಾಯಿಸಿರುವುದು ದೃಢಪಟ್ಟಿದೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ನಿಯಮ ಉಲ್ಲಂಘಿಸಿದ ಅಧಿಕಾರಿಯ ನಡೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.
ಸಿಪಿಐ ವಿರುದ್ಧ ಕೇವಲ ಮದ್ಯಪಾನದ ಆರೋಪವಷ್ಟೇ ಅಲ್ಲದೆ, ಹಣಕಾಸಿನ ಅಕ್ರಮದ ದೂರುಗಳೂ ಕೇಳಿಬಂದಿವೆ. ಕುಡಿದು ವಾಹನ ಚಲಾಯಿಸಿದ ಪ್ರಕರಣವೊಂದರಲ್ಲಿ ಸಾರ್ವಜನಿಕರಿಂದ ವಸೂಲಿ ಮಾಡಿದ್ದ 15 ಸಾವಿರ ರೂ. ದಂಡದ ಹಣವನ್ನು ನ್ಯಾಯಾಲಯಕ್ಕೆ ಪಾವತಿಸದೆ ಅಧಿಕಾರಿಗಳೇ ಲಪಟಾಯಿಸಿದ್ದಾರೆ ಎಂಬ ಆರೋಪ ಸಾಬೀತಾಗಿದೆ. ಅಲ್ಲದೆ, ದನ ಸಾಗಾಟಗಾರರೊಂದಿಗೆ ಸಂಪರ್ಕ ಹೊಂದಿದ್ದ ಹಾಗೂ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ಬಗ್ಗೆಯೂ ದೂರುಗಳಿದ್ದವು.
ಸಿಪಿಐ ಮಂಜುನಾಥ್ ಅವರ ಅಕ್ರಮಗಳಿಗೆ ಸಾಥ್ ನೀಡುತ್ತಿದ್ದ ಹೆಡ್ ಕಾನ್ಸ್ಟೇಬಲ್ ಅಶೋಕ ನಾಯ್ಕ್ ಅವರೂ ಕೂಡ ಅಮಾನತಿನ ಶಿಕ್ಷೆಗೆ ಗುರಿಯಾಗಿದ್ದಾರೆ. ಸಿಪಿಐ ವಿರುದ್ಧ ದೂರು ನೀಡದಂತೆ ದೂರುದಾರರಿಗೆ ಬೆದರಿಕೆ ಹಾಕಿದ ಆರೋಪ ಇವರ ಮೇಲಿದೆ. ಇಲಾಖೆಯ ಗೌರವಕ್ಕೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಇಬ್ಬರನ್ನೂ ಅಮಾನತುಗೊಳಿಸಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ಮೂಲಗಳು ಹೇಳಿವೆ.
