ಚಾಮರಾಜನಗರ: ಜಿಲ್ಲೆಯ ನ್ಯಾಯಾಲಯಗಳಲ್ಲಿ ಬಾಕಿ ಇರುವ ಭೂ ಸ್ವಾಧೀನ ಹಾಗೂ ಭೂಸ್ವಾಧೀನ ಜಾರಿ ಪ್ರಕರಣಗಳನ್ನು ಇತ್ಯರ್ಥಪಡಿಸಲು ಜನವರಿ 24ರಂದು ವಿಶೇಷ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜಿ. ಪ್ರಭಾವತಿ ಅವರು ತಿಳಿಸಿದರು.
ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ವ್ಯಾಜ್ಯ ಪೂರ್ವ ಪರಿಹಾರ ಕೇಂದ್ರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ಜಿಲ್ಲಾ ನ್ಯಾಯಾಧೀಶರು ಸುಪ್ರೀಂ ಕೋರ್ಟ್ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜನವರಿ 24ರಂದು ಜಿಲ್ಲಾ ಹಾಗೂ ತಾಲೂಕು ನ್ಯಾಯಾಲಯಗಳಲ್ಲಿ ಭೂಸ್ವಾಧೀನಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಇತ್ಯರ್ಥಪಡಿಸುವ ಸಲುವಾಗಿ ವಿಶೇಷ ಲೋಕ್ ಅದಾಲತ್ ನಡೆಯಲಿದೆ ಎಂದರು.

ಜಿಲ್ಲಾ ಹಾಗೂ ತಾಲೂಕು ನ್ಯಾಯಾಲಯಗಳಲ್ಲಿ ಪ್ರತಿ ವರ್ಷದಲ್ಲಿ ಮೂರು ತಿಂಗಳಿಗೊಮ್ಮೆ ಮೆಗಾ ಲೋಕ್ ಅದಾಲತ್‍ಗಳು ನಡೆಯುತ್ತಿವೆ. ಈ ಅದಾಲತ್‍ಗಳಲ್ಲಿ ರಾಜಿಯಾಗಬಹುದಾದ ಗರಿಷ್ಠ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗುತ್ತಿದೆ. ಇತ್ತೀಚೆಗೆ ಲೋಕ್ ಅದಾಲತ್‍ಗಳ ಬಗ್ಗೆ ಜನರಲ್ಲಿ ಅರಿವು ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಎಲ್.ಎ.ಸಿ ರಾಜಿಯೋಗ್ಯ ಪ್ರಕರಣಗಳು ನ್ಯಾಯಾಲಯಗಳಿಗೆ ದಾಖಲಾಗುತ್ತಿವೆ. ಇವುಗಳನ್ನು ಗುರುತಿಸಿ, ವಿಂಗಡಿಸಿ ಇತ್ಯರ್ಥಪಡಿಸುವ ಸದುದ್ದೇಶದಿಂದ ವಿಶೇಷ ಲೋಕ್ ಅದಾಲತ್ ಅನ್ನು ಆಯೋಜಿಸಲಾಗುತ್ತಿದೆ. ವಿಶೇಷ ಲೋಕ್ ಅದಾಲತ್ ಜನವರಿ 24ರ ಮಧ್ಯಾಹ್ನ 2.30ರಿಂದ ಸಂಜೆ 5.30 ಗಂಟೆಯವರೆಗೆ ಅರ್ಧದಿನ ಮಾತ್ರ ನಡೆಯಲಿದೆ ಎಂದು ತಿಳಿಸಿದರು.
ಇದಲ್ಲದೆ, ಜಿಲ್ಲೆಯ ನ್ಯಾಯಾಲಯಗಳಲ್ಲಿ ಪೆÇೀಷಕರು ಹಾಗೂ ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆಯಡಿ ಬಾಕಿ ಇರುವ ಹಿರಿಯ ನಾಗರಿಕರಿಗೆ ಸಂಬಂಧಿಸಿದ ಪ್ರಕರಣಗಳನ್ನು ಇತ್ಯರ್ಥಪಡಿಸಲು ನಿರ್ಧರಿಸಲಾಗಿದೆ. ಪೋಷಕರು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆಯಡಿ ಜಿಲ್ಲಾದ್ಯಂತ ಎ.ಸಿ ಹಾಗೂ ಡಿ.ಸಿ ಕೋರ್ಟ್‍ಗಳಲ್ಲಿ ಬಾಕಿ ಇರುವ ಹಿರಿಯ ನಾಗರಿಕರಿಗೆ ಸಂಬಂಧಿಸಿದ ಪ್ರಕರಣಗಳನ್ನು ಇತ್ಯರ್ಥಪಡಿಸಲು ಫೆಬ್ರವರಿ 28ರಂದು ವಿಶೇಷ ಲೋಕ್ ಅದಾಲತ್ ಆಯೋಜಿಸಲಾಗಿದೆ ಎಂದು ಹೇಳಿದರು.
ಈಗಾಗಲೇ ಜನವರಿ 2 ರಿಂದ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ 90 ದಿನಗಳ ಕಾಲ ಮಧ್ಯಸ್ಥಿಕಾ ಅಭಿಯಾನ ಆರಂಭವಾಗಿದೆ. ಕಕ್ಷಿದಾರರು, ಸಂಧಾನಕಾರರು ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ಮಧ್ಯಸ್ಥಿಕೆ ಅಭಿಯಾನ 3 ತಿಂಗಳು ನಿರಂತರವಾಗಿ ನಡೆಯಲಿದೆ. ವಿಶೇಷ ಲೋಕ್ ಅದಾಲತ್ ಯಶಸ್ವಿಗೊಳಿಸಲು ವಕೀಲರು ಹಾಗೂ ಕಕ್ಷಿದಾರರ ಸಹಕಾರ ಮುಖ್ಯವಾಗಿದೆ ಎಂದು ಜಿಲ್ಲಾ ನ್ಯಾಯಾಧೀಶರಾದ ಜಿ. ಪ್ರಭಾವತಿ ಅವರು ತಿಳಿಸಿದರು.
ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಿ.ಡಿ. ಪ್ರಕಾಶ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ರಾಮಸಮುದ್ರ ಪುಟ್ಟಸ್ವಾಮಿ, ಪ್ರಧಾನ ಕಾರ್ಯದರ್ಶಿ ಶಿವರಾಮು ಅವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.
ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ
